ಮಧುಗಿರಿ: ಪಿಡಿಒ ರಜನಿ ಅವರು ಸುಮಾರು 11 ವರ್ಷಗಳಿಂದ ಇದೇ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ರೆಡ್ಡಿಹಳ್ಳಿ ಗ್ರಾಪಂ ಪಿಡಿಒ ರಜನಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಮಳೆಯನ್ನೂ ಲೆಕ್ಕಿಸದೆ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ತಾಲೂಕಿನ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿ ಗ್ರಾಪಂ.ನಲ್ಲಿ ಹಲವು ವರ್ಷಗಳಿಂದ ವಿವಿಧ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಚರಂಡಿ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಕೆಲವು ಕಡೆ ಅವೈಜ್ಞಾನಿಕವಾಗಿ ನಿರ್ಮಿಸಿರುವುದರಿಂದ ಕೊಳಚೆ ನೀರು ಸರಾಗವಾಗಿ ಹರಿಯದೆ ಅನೈರ್ಮಲ್ಯ ಉಂಟಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಕಳಪೆ ಹಾಗೂ ಅವೈಜ್ಞಾನಿಕವಾಗಿವೆ. ಈ ಬಗ್ಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ದಾಖಲೆಗಳನ್ನು ಹಲವು ಬಾರಿ ಸಲ್ಲಿಸಿದರೂ ಈ-ಸ್ವತ್ತು ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕೆಲ ದಾಖಲೆಗಳು ಕಣ್ಮರೆಯಾಗಿವೆ. ಮನೆ ನಿರ್ಮಾಣ ಸೇರಿದಂತೆ ಮೂಲಸೌಲಭ್ಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ರಾಜಕೀಯ ತಾರತಮ್ಯ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು.
ರೆಡ್ಡಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಾಂಪೌಂಡ್ ನಿರ್ಮಾಣ ಕಾಮಗಾರಿಯಲ್ಲೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಅವರು, ಕಾಮಗಾರಿಯ ಸತ್ಯಾಸತ್ಯತೆ ಹಾಗೂ ಬಿಲ್ ಪಾವತಿ ಕುರಿತು ಮೇಲಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.
ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಮಸ್ಯೆಗಳನ್ನು ಒಳಗೊಂಡ ನಾಮಫಲಕಗಳನ್ನು ಹಿಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪಿಡಿಒ ವಿರುದ್ಧ ಘೋ?ಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಕಾಮಗಾರಿಗಳ ಗುಣಮಟ್ಟ ಮತ್ತು ಅನು?ನದ ಕುರಿತು ಸಮಗ್ರ ತನಿಖೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪಿಡಿಓ ವರ್ಗಾವಣೆಗೆ ಆಗ್ರಹ: ಪಿಡಿಒ ರಜನಿ ಅವರು ಸುಮಾರು 11 ವರ್ಷಗಳಿಂದ ಇದೇ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಭಿಜಿರಾಮ್ಜಿ ಯೋಜನೆಯಡಿ ಕಾಮಗಾರಿಗಳ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಇದರಿಂದ ಗ್ರಾಮದಲ್ಲಿ ಬಣ ರಾಜಕೀಯಕ್ಕೆ ಅವಕಾಶವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಪಂಚಾಯಿತಿಯಲ್ಲಿನ ಅವ್ಯವಹಾರಗಳನ್ನು ಮುಚ್ಚಿಡಲು ಅರ್ಜಿಗಳು ಹಾಗೂ ದಾಖಲೆಗಳು ಕಾಣೆಯಾಗುವಂತೆ ಮಾಡಲಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಅಗತ್ಯ ಮಾಹಿತಿಯ ನಾಮಫಲಕ ಅಳವಡಿಸದಿರುವುದು ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.