ತುಮಕೂರು: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಹಾಗೂ ಇದರ ವಿರುದ್ಧ ಕಾಂಗ್ರೆಸ್ ಪಕ್ಷದವರು ಹರಡುತ್ತಿರುವ ತಪ್ಪು ಮಾಹಿತಿಗೆ ಸ್ಪಷ್ಟನೆ ನೀಡಲು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬಿಜೆಪಿಯು ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಅಭಿಯಾನ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದ ಅಂಗವಾಗಿ ಕೇಂದ್ರ ಸರ್ಕಾರದ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗುರುವಾರ ನಗರದ ಅನನ್ಯ ಕಾಲೇಜಿನಲ್ಲಿ ನಡೆದ ಯುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
ಎಸ್‌ಐಆರ್ ಪ್ರಕ್ರಿಯೆಯ ಆಶಯ ಹಾಗೂ ಅದರ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯುವಜನರ ಪಾತ್ರ, ಸಾಂವಿಧಾನಿಕ ಪ್ರಕ್ರಿಯೆಗಳು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯ ಸತ್ಯಾಸತ್ಯತೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿರೋಧ ಪಕ್ಷಗಳ ರಾಜಕೀಯ ನಿಲುವುಗಳು ದೇಶದಲ್ಲಿ ಸೃಷ್ಟಿಸುತ್ತಿರುವ ಅರಾಜಕತೆ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಮುಖಂಡ ವೈ.ಹೆಚ್. ಹುಚ್ಚಯ್ಯ, ಅನನ್ಯ ಕಾಲೇಜು ಸಂಸ್ಥೆ ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ಉಮೇಶ್, ಆಶಾ ಪ್ರಸನ್ನಕುಮಾರ್ ಮೊದಲಾದವರು ಭಾಗವಹಿಸಿದ್ದರು.